ತಂಬಾಕು ಮಾರಾಟ ಪತ್ತೆಗೆ ತಂಡ

ಉಡುಪಿ: ಜಿಲ್ಲೆಯಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶಗಳನ್ನು ಒಳಗೊಂಡ ಗುಟ್ಕಾ, ಪಾನ್ ಮಸಾಲಾಗಳ ಮಾರಾಟವನ್ನು ನಿಷೇಧಿಸಲಾಗಿದೆ. ಆದರೂ, ಅನಧಿಕೃತವಾಗಿ ಮಾರಾಟ ಮಾಡುವವರನ್ನು ಪತ್ತೆ ಹಚ್ಚಲು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶೇಷ ತಂಡಗಳನ್ನು ರಚಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದರು.
        ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಪರ ಜಿಲ್ಲಾಧಿಕಾರಿ ಮಾತನಾಡಿದರು.
ತಂಬಾಕು ನಿಷೇಧ ಕಾಯಿದೆ ಜಾರಿಗೆ ಬಂದ ನಂತರ ಜಿಲ್ಲೆಯಲ್ಲಿ ಅಕ್ರಮವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ವಿವಿಧ ಪ್ರಕರಣಗಳಿಗೆ ಸಂಬಂದಪಟ್ಟಂತೆ ರು. 29,000 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
       ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ವಿತರಣೆಯಲ್ಲಿ ತೊಡಗಿರುವ ಸಂಸ್ಥೆಗಳ ವಿವರಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಅವರು ಜಿಲ್ಲಾ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚಿಸಿದರು.
        ಉಡುಪಿ ಜಿಲ್ಲೆಯ ಎಲ್ಲಾ ಖಾಸಗಿ ಬಸ್‌ಗಳಲ್ಲಿ ಗುಟ್ಕಾ ಸಾಗಾಟ ಮಾಡದಂತೆ ಹಾಗೂ ಬಸ್‌ಗಳಲ್ಲಿ ನಿಷೇಧ ಕುರಿತ ಸ್ಟಿಕ್ಕರ್‌ಗಳನ್ನು ಅಳವಡಿಸುವಂತೆ ಬಸ್ ಮಾಲೀಕರಿಗೆ ಸೂಚಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.
      ತಂಬಾಕು ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಾಣೇಶ್ ರಾವ್, ಪೋಲಿಸ್ ಉಪಾಧೀಕ್ಷಕ ಪ್ರಭುದೇವ ಮಾನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ, ಜಿಲ್ಲಾ ಸರ್ಜನ್ ಆನಂದ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರೋಹಿಣಿ ಹಾಗೂ ಆರೋಗ್ಯ ಇಲಾಖೆಯ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com