ಪ್ರತಿ ತಾಲೂಕಿನಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅವಶ್ಯ: ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್

ಕುಂದಾಪುರ: ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತ ಕ್ರೀಡೆಯಲ್ಲಿ ಸಾಕಷ್ಟು ಹಿಂದುಳಿದಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲಾಗಿದೆ. ಸಿಂಥೆಟಿಕ್ ಟ್ರ್ಯಾಕ್ ಪ್ರತಿ ತಾಲೂಕು ಕೇಂದ್ರದಲ್ಲಿ ನಿರ್ಮಾಣ ಆದಾಗ ಮಾತ್ರ ಕ್ರೀಡೆಗೆ ಉತ್ತೇಜನ ದೊರೆಯಲು ಸಾಧ್ಯ ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು, ಚಲನ ಚಿತ್ರ ನಟ ರೋಹಿತ್ ಕುಮಾರ್ ಕಟೀಲು ಹೇಳಿದರು. 

ಇಲ್ಲಿನ ಗಾಂಧಿ ಮೈದಾನದಲ್ಲಿ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಎರಡು ದಿನಗಳ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. 

ಆಹಾರ, ನಿದ್ದೆಯಷ್ಟೇ ಪ್ರಾಮುಖ್ಯತೆ ಕ್ರೀಡೆಗೆ ನೀಡಬೇಕು. ಕ್ರೀಡೆ ಮನುಷ್ಯ ಜೀವನದ ಅವಿಭಾಜ್ಯ ಅಂಗ. ಚೀನಾದಲ್ಲಿ ಕ್ರೀಡಾಂಗಣ ಇಲ್ಲದಿದ್ದಲ್ಲಿ ಶಾಲೆ ತೆರೆಯಲು ಪರವಾನಗಿ ನೀಡೋದಿಲ್ಲ. ನಮ್ಮಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆಯಾಗುತ್ತಿದೆ. ಅಜ್ಞಾತವಾಗಿರುವ ಅನೇಕ ಬಡ ದೇಶಗಳು ಕ್ರೀಡೆಯಲ್ಲಿ ಪದಕ ಕೊಳ್ಳೆ ಹೊಡೆಯುವುದನ್ನು ನೋಡುವಾಗ ನಮ್ಮಲ್ಲಿ ಯಾಕಿಷ್ಟು ನಿರ್ಲಕ್ಷ್ಯ ಎಂಬ ಖೇದ ಆಗುತ್ತದೆ. ಈ ನಡುವೆಯೂ ವಿದ್ಯಾಸಂಸ್ಥೆಗಳು ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು. 

ಅಂತಾರಾಷ್ಟ್ರೀಯ ವೇಟ್ ಲಿಪ್ಟರ್, ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಅಸೋಸಿಯೇಶನ್ ಕಾರ್ಯದರ್ಶಿ ಚಂದ್ರಹಾಸ ರೈ ಕ್ರೀಡಾಜ್ಯೋತಿ ಬೆಳಗಿಸಿದರು. ಕುಂದಾಪುರ ಪುರಸಭೆ ಉಪಾಧ್ಯಕ್ಷ ನಾಗರಾಜ ಕಾಮಧೇನು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. 

ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಸಂಯೋಜಕ ಡಾ. ಕಿಶೋರ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಕುಂದಾಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಸೊಸೈಟಿ ಸದಸ್ಯರಾದ ಸೋಲೊಮನ್ ಸೋನ್ಸ್, ಬಾಂಡ್ಯ ಸುಧಾಕರ ಶೆಟ್ಟಿ, ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲರ ಸಂಘದ ಅಧ್ಯಕ್ಷ ಆರ್.ಬಿ. ನಾಯಕ್, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಅಪ್ಸರಾ ಆರ್. ಕಟೀಲು, ಎಸ್. ನೊರೋನ್ಹಾ, ಅರುಣ್‌ಪ್ರಕಾಶ್ ಶೆಟ್ಟಿ, ವಸಂತ ಶೆಟ್ಟಿ, ಕರುಣಾಕರ ಶೆಟ್ಟಿ, ಶ್ರೀಧರ ಶೆಟ್ಟಿ ಉಪಸ್ಥಿತರಿದ್ದರು. 

ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ನವೀನ್ ಕುಮಾರ ಶೆಟ್ಟಿ ಸ್ವಾಗತಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಶಿಂಧಾ ಪ್ರಾಸ್ತಾವಿಕ ಮಾತನಾಡಿದರು. ಜಯಶೀಲ ಪೈ, ಚಂದ್ರಶೇಖರ ಬೀಜಾಡಿ ಮತ್ತು ಪ್ರಕಾಶ್ ಶೆಟ್ಟಿ ಬೆಳಗೋಡು ಕಾರ್ಯಕ್ರಮ ನಿರ್ವಹಿಸಿದರು. 

ಕ್ರೀಡಾಕೂಟಕ್ಕೆ ಮೊದಲು ಕುಂದಾಪುರ ಕುಂದೇಶ್ವರ ದೇವಸ್ಥಾನ ಮಾರ್ಗದಿಂದ ಕುಂದಾಪುರ ಪ್ರಮುಖ ಬೀದಿಯಲ್ಲಿ ಕ್ರೀಡಾಜ್ಯೋತಿಯೊಂದಿಗೆ ಆಕರ್ಷಕ ಮೆರವಣಿಗೆ ನಡೆಯಿತು. ಹೊನ್ನಾವರದ ಬ್ಯಾಂಡ್ ಮೇಳ ಮೆರವಣಿಗೆ ಮತ್ತು ಕ್ರೀಡಾಕೂಟದ ಮೆರುಗು ಹೆಚ್ಚಿಸಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com