ಮಹಿಳಾ ಬ್ಯಾಂಕ್ ತೆರೆಯಲು ಚಿಂತನೆ: ಸಚಿವ ಸೊರಕೆ

ತ್ರಾಸಿ: ಮಹಿಳೆಯರ ಆರ್ಥಿಕ, ಸ್ವಾವಲಂಬಿ ಬದುಕಿಗೆ ಪೂರಕವಾಗಲು ಶೀಘ್ರದಲ್ಲಿಯೇ ಮಹಿಳಾ ಬ್ಯಾಂಕ್ ರಚಿಸುವ ಕುರಿತು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ ಸೊರಕೆ ಹೇಳಿದರು. 

 ತ್ರಾಸಿ ಕ್ಲಾಸಿಕ್ ಅಡಿಟೋರಿಯಂನಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಉಡುಪಿ, ತಾಲೂಕು ಪಂಚಾಯಿತಿ ಕುಂದಾಪುರ ಸಂಯುಕ್ತ ಆಶ್ರಯದಲ್ಲಿ ನಡೆಸಿದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಕಾರದ ವಿವಿಧ ಸವಲತ್ತು ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. 

ಈಗಾಗಲೆ ಸ್ತ್ರೀಶಕ್ತಿ ಸಂಘಗಳಿಗೆ ನೀಡಲಾಗುತ್ತಿದ್ದ ಸುತ್ತುನಿಧಿಯನ್ನು ರೂ.5 ಸಾವಿರದಿಂದ ರೂ.25 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ಹಾಲು ಉತ್ಪಾದಕರಿಗೆ 4 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಮಹಿಳೆಯರು, ಪುರುಷರ ಕಲ್ಯಾಣಕ್ಕಾಗಿ ಸರಕಾರ ನೀಡುವ ಪ್ರತಿಯೊಂದು ಸವಲತ್ತನ್ನು ಅರ್ಹರು ಪಡೆಯಬೇಕು ಎಂದು ಅವರು ಮನವಿ ಮಾಡಿಕೊಂಡರು. 

ಅವರು ಇದೆ ಸಂದರ್ಭದಲ್ಲಿ ತಾ.ಪಂ., ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ, ಹಿಂದುಳಿದ ವರ್ಗಗಳ ಇಲಾಖೆ, ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 1307 ಫಲಾನುಭವಿಗಳಿಗೆ ರೂ.7.50ಕೋಟಿ ಮೊತ್ತದ ಸವಲತ್ತು ವಿತರಿಸಿದರು. 

ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿ.ಪಂ.ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಜಿ.ಪಂ.ಸದಸ್ಯೆ ಇಂದಿರಾ ಶೆಟ್ಟಿ, ಕುಂದಾಪುರ ತಾ.ಪಂ.ಅಧ್ಯಕ್ಷ ಭಾಸ್ಕರ ಬಿಲ್ಲವ ಮತ್ತಿತರರು ಉಪಸ್ಥಿತರಿದ್ದರು. 

ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಸ್ವಾಗತಿಸಿದರು. ತಾಲೂಕು ಅಕ್ಷರ ದಾಸೋಹ ನೋಡಲ್ ಅಧಿಕಾರಿ ಕೆದೂರು ಸೀತಾರಾಮ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಮಕ್ಕಳ ಕಲ್ಯಾಣ ಇಲಾಖಾಧಿಕಾರಿ ಸದಾನಂದ ವಂದಿಸಿದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com