ಗಂಗೊಳ್ಳಿ ಠಾಣಾ ವ್ಯಾಪ್ತಿಯ ಪ್ರತಿ ಗ್ರಾಮದಲ್ಲಿ ಜನಸಂಪರ್ಕ ಸಭೆ : ಡಿವೈಎಸ್‌ಪಿ

ಗಂಗೊಳ್ಳಿ: ಪೊಲೀಸರು ಮತ್ತು ಜನರ ನಡುವೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿ ಮಾಡುವ ದೃಷ್ಟಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 13 ಗ್ರಾಮಗಳಲ್ಲಿ ಪೊಲೀಸ್ ಜನಸಂಪರ್ಕ ಸಭೆ ಆಯೋಜಿಸಲಾಗುವುದು ಎಂದು ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ ಹೇಳಿದರು. 

ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಆಯೋಜಿಸಲಾಗಿದ್ದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಿಕ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. 

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಗಂಗೊಳ್ಳಿಯಲ್ಲಿ ಕೆಲವೊಂದು ಅಹಿತಕರ ಘಟನೆಗಳು ನಡೆದಿದ್ದರೂ ಬಳಿಕ ಸಾರ್ವಜನಿಕರ ಸಹಕಾರದಿಂದ ಪುನಃ ಶಾಂತಿ ಸುವ್ಯವಸ್ಥೆ ನೆಲೆಸಿದೆ. ಕೇವಲ ಪೊಲೀಸರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸಾಧ್ಯವಿಲ್ಲ. ಗ್ರಾಮದ ಜನರು ಪೊಲೀಸರೊಂದಿಗೆ ಸಹಕರಿಸಿದಾಗ, ತಮ್ಮ ಸಮಸ್ಯೆಗಳನ್ನು ಪೊಲೀಸರೊಂದಿಗೆ ಮುಕ್ತವಾಗಿ ಹಂಚಿಕೊಂಡಾಗ ಮತ್ತು ಸಮಾಜದಲ್ಲಿ ಅಶಾಂತಿ ಸಷ್ಟಿಸುವ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿದಾಗ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ ಎಂದರು. 

ಗಂಗೊಳ್ಳಿಯಲ್ಲಿ ಸುಸಜ್ಜಿತ ಪೊಲೀಸ್ ಹೊರಠಾಣೆ ಆರಂಭಿಸುವ, ಸಿಬ್ಬಂದಿ ಕೊರತೆಯನ್ನು ನೀಗಿಸಿ ಠಾಣೆಗೆ ಸಾಕಷ್ಟು ಸಿಬ್ಬಂದಿಗಳನ್ನು ನೇಮಿಸುವ ಬಗ್ಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಅವರು ಗಂಗೊಳ್ಳಿಯ ಮುಖ್ಯರಸ್ತೆಯಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸಲು ಸೂಕ್ತ ಕ್ರಮಕೈಗೊಳ್ಳುವುದಾಗಿ ಅವರು ಹೇಳಿದರು. 

ತಾ.ಪಂ.ಸದಸ್ಯ ಎಚ್.ಮಂಜಯ್ಯ ಶೆಟ್ಟಿ, ಗಂಗೊಳ್ಳಿಯ ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಸಿಡಬ್ಲ್ಯುಸಿಯ ಅರುಣಾಚಲ ಮಯ್ಯ, ಮರವಂತೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜನಾರ್ದನ, ಗಂಗೊಳ್ಳಿಯ ಉದ್ಯಮಿ ಎಂ.ಎಂ.ಸುವರ್ಣ, ಗಂಗೊಳ್ಳಿ ಗ್ರಾ.ಪಂ.ಸದಸ್ಯ ಯೂನಿಸ್ ಸಾಹೇಬ್, ದುರ್ಗರಾಜ್ ಪೂಜಾರಿ, ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ಸಲಹೆ ಸೂಚನೆ ನೀಡಿದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com